Sidlaghatta : ನವೆಂಬರ್ 12 ರ ಶನಿವಾರದಂದು ತಾಲ್ಲೂಕು ಕಾನೂನು ಸೇವಾ ಸಮಿತಿಯಿಂದ ನಗರದ ಸಿವಿಲ್ ನ್ಯಾಯಾಲಯದ (Civil Court) ಆವರಣದಲ್ಲಿ ರಾಷ್ಟ್ರೀಯ ಲೋಕ್ ಅದಾಲತ್ (Lok Adalat) ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಇದರ ಸದುಪಯೋಗವನ್ನು ಕಕ್ಷಿದಾರರು ಪಡೆದುಕೊಳ್ಳಬೇಕು ಎಂದು ತಾಲ್ಲೂಕು ಕಾನೂನು ಸೇವಾ ಸಮಿತಿ ಅಧ್ಯಕ್ಷ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಯಮನಪ್ಪ ಕರೆಹನುಮಂತಪ್ಪ ತಿಳಿಸಿದರು.
ಶಿಡ್ಲಘಟ್ಟ ನಗರದ ನ್ಯಾಯಾಲಯದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.
ಕೌಟುಂಬಿಕ ವ್ಯಾಜ್ಯ, ಸಿವಿಲ್, ಹಣಕಾಸಿನ ವಿಚಾರ, ಬ್ಯಾಂಕ್‌ನಲ್ಲಿ ಸಾಲ ಪಡೆದಿರುವ ಪ್ರಕರಣ ಸೇರಿದಂತೆ ಅನೇಕ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಬಗೆಹರಿಸಿಕೊಳ್ಳಬಹುದು. ನ್ಯಾಯಾಲಯದಲ್ಲಿ ರಾಜೀ ಮಾಡಿಕೊಂಡರೆ ಮಾನವ ಸಂಬಂಧ, ಮೌಲ್ಯಗಳು, ಶಾಂತಿ, ನೆಮ್ಮದಿಯ ವಾತಾವರಣ ಮೂಡಿ ಕಕ್ಷಿದಾರರ ಅಮೂಲ್ಯವಾದ ಸಮಯ ಮತ್ತು ಹಣ ಇದರಿಂದ ಉಳಿಯುತ್ತದೆ ಎಂದು ಹೇಳಿದರು.
ಲೋಕ್ ಅದಾಲತ್ ಕಾರ್ಯಕ್ರಮದಲ್ಲಿ ನ್ಯಾಯಾಲಯದಲ್ಲಿ ನಡೆಯುತ್ತಿರುವ ರಾಜಿಗೆ ಯೋಗ್ಯವಾದ ಪ್ರಕರಣಗಳು ಹಾಗೂ ವ್ಯಾಜ್ಯ ಪೂರ್ವ ಪ್ರಕರಣಗಳನ್ನು ರಾಜಿ ಮಾಡಿಕೊಳ್ಳಲು ಇಚ್ಛಿಸುವ ಕಕ್ಷಿದಾರರು ಸ್ವಯಂ ಪ್ರೇರಿತರಾಗಿ ತಮ್ಮ ವಕೀಲರ ಮೂಲಕ ಅಥವಾ ಖುದ್ದಾಗಿ ಹಾಜರಾಗಿ ರಾಜಿ ಮಾಡಿಕೊಳ್ಳುವ ಮೂಲಕ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಹೇಳಿದರು.
ಸರ್ಕಾರಿ ಅಥವಾ ಖಾಸಗಿ ಶಾಲೆಯ ಮಕ್ಕಳಿಗೆ ಜನನ ಪ್ರಮಾಣ ಪತ್ರ ಇಲ್ಲದಿದ್ದಲ್ಲಿ ಪಾಲಕರು ಅಥವಾ ಶಿಕ್ಷಣ ಸಂಸ್ಥೆಯವರು ತಾಲ್ಲೂಕು ಕಾನೂನು ಸೇವಾ ಸಮಿತಿಯನ್ನು ಸಂಪರ್ಕಿಸಿ ಅರ್ಜಿ ದಾಖಲಿಸಿದರೆ ಉಚಿತವಾಗಿ ಜನನ ಪ್ರಮಾಣ ಪತ್ರವನ್ನು ನೀಡಲಾಗುವುದು ಎಂದರು.
ತಾಲ್ಲೂಕು ಕಾನೂನು ಸೇವಾ ಸಮಿತಿ ಸದಸ್ಯ ಕಾರ್ಯದರ್ಶಿ ಹಾಗೂ ಪ್ರಧಾನ ಸಿವಿಲ್ ನ್ಯಾಯಾಧೀಶೆ ಜೆ.ಪೂಜ, ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ಟಿ.ವಿ.ಚಂದ್ರಶೇಖರಗೌಡ, ಕಾರ್ಯದರ್ಶಿ ಲೋಕೇಶ್ ಹಾಜರಿದ್ದರು.