Sidlaghatta : ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಜುಲೈ 12 ರಂದು ರಾಷ್ಟ್ರೀಯ ಲೋಕ್ ಅದಾಲತ್ ಹಮ್ಮಿಕೊಂಡಿದ್ದು, ನಾಗರಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು. ರಾಜಿ ಸಂಧಾನದ ಮೂಲಕ ಪ್ರಕರಣಗಳ ಶೀಘ್ರ ವಿಲೇವಾರಿ ಮಾಡಬೇಕು ಎಂಬುದು ನಮ್ಮ ಆಶಯವಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಸಮಿತಿಯ ಸದಸ್ಯ ಕಾರ್ಯದರ್ಶಿ ಶಿಲ್ಪಾ ಅವರು ತಿಳಿಸಿದರು.
ನಗರದ ನ್ಯಾಯಾಲಯದ ಸಭಾಂಗಣದಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.
ಈಗಾಗಲೇ ನಡೆದಿರುವ ಹಲವಾರು ಲೋಕ್ ಅದಾಲತ್ ನಲ್ಲಿ ಶಿಡ್ಲಘಟ್ಟದ ನ್ಯಾಯಾಲಯದಲ್ಲಿ ಉತ್ತಮ ಸಂಖ್ಯೆಯ ಪ್ರಕರಣಗಳ ವಿಲೇವಾರಿ ಆಗಿದೆ. ಆದರೂ ಜಿಲ್ಲೆಯಲ್ಲಿ ಚಿಂತಾಮಣಿ ಮತ್ತು ಗೌರಿಬಿದನೂರಿನ ನಂತರದ ಸ್ಥಾನದಲ್ಲಿದೆ. ಈ ಬಾರಿ ವಕೀಲರೂ ಆಸಕ್ತಿ ವಹಿಸಿ ಹೆಚ್ಚಿನ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಗೊಳಿಸಲು ಕೋರಿದ್ದೇವೆ. ಕೌಟುಂಬಿಕ ವ್ಯಾಜ್ಯ, ಸಿವಿಲ್, ಹಣಕಾಸಿನ ವಿಚಾರ, ಬ್ಯಾಂಕ್ ನಲ್ಲಿ ಸಾಲ ಪಡೆದಿರುವ ಪ್ರಕರಣ ಸೇರಿದಂತೆ ಅನೇಕ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಬಗೆಹರಿಸಿಕೊಳ್ಳಬಹುದು ಎಂದು ಹೇಳಿದರು.
ಹಿರಿಯ ಸಿವಿಲ್ ನ್ಯಾಯಾಧೀಶ ಮಹಮ್ಮದ್ ರೋಷನ್ ಷಾ ಮಾತನಾಡಿ, ನ್ಯಾಯಾಲಯದಲ್ಲಿ ರಾಜೀ ಮಾಡಿಕೊಂಡರೆ ಮಾನವ ಸಂಬಂಧ, ಮೌಲ್ಯಗಳು, ಶಾಂತಿ, ನೆಮ್ಮದಿಯ ವಾತಾವರಣ ಮೂಡಿ ಕಕ್ಷಿದಾರರ ಅಮೂಲ್ಯವಾದ ಸಮಯ ಮತ್ತು ಹಣ ಇದರಿಂದ ಉಳಿಯುತ್ತದೆ. ರಾಜಿಗೆ ಯೋಗ್ಯವಾದ ಪ್ರಕರಣಗಳು ಹಾಗೂ ವ್ಯಾಜ್ಯ ಪೂರ್ವ ಪ್ರಕರಣಗಳನ್ನು ರಾಜಿ ಮಾಡಿಕೊಳ್ಳಲು ಇಚ್ಛಿಸುವ ಕಕ್ಷಿದಾರರು ಸ್ವಯಂ ಪ್ರೇರಿತರಾಗಿ ತಮ್ಮ ವಕೀಲರ ಮೂಲಕ ಅಥವಾ ಖುದ್ದಾಗಿ ಹಾಜರಾಗಿ ರಾಜಿ ಮಾಡಿಕೊಳ್ಳುವ ಮೂಲಕ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬೇಕೆಂದು ಹೇಳಿದರು.
ಪ್ರಧಾನ ಸಿವಿಲ್ ನ್ಯಾಯಾಧೀಶೆ ಸುಕನ್ಯಾ.ಸಿ.ಎಸ್., ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ಎ.ನಾರಾಯಣಸ್ವಾಮಿ, ಕಾರ್ಯದರ್ಶಿ ಸಿ.ಜಿ.ಭಾಸ್ಕರ್, ಹಿರಿಯ ವಕೀಲರಾದ ಎಂ.ಪಾಪಿರೆಡ್ಡಿ, ಡಿ.ಅಶ್ವತ್ಥನಾರಾಯಣ, ಗೋಪಿನಾಥ್ ಹಾಜರಿದ್ದರು.