
Sidlaghatta : ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ನಿರ್ದೇಶನದ ಮೇರೆಗೆ, ತಾಲ್ಲೂಕು ಕಾನೂನು ಸೇವಾ ಸಮಿತಿ ವತಿಯಿಂದ ಸೆಪ್ಟೆಂಬರ್ 13ರಂದು (ಶನಿವಾರ) ರಾಷ್ಟ್ರೀಯ ಲೋಕ ಅದಾಲತ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ನಾಗರಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಸಮಿತಿ ಅಧ್ಯಕ್ಷರು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಮಹಮ್ಮದ್ ರೋಷನ್ ಷಾ ತಿಳಿಸಿದ್ದಾರೆ.
ನಗರದ ನ್ಯಾಯಾಲಯ ಆವರಣದಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕುಟುಂಬ ವ್ಯಾಜ್ಯಗಳು, ಸಿವಿಲ್ ಪ್ರಕರಣಗಳು, ಹಣಕಾಸು ಸಂಬಂಧಿತ ವ್ಯಾಜ್ಯಗಳು, ಬ್ಯಾಂಕ್ ಸಾಲ ಪ್ರಕರಣಗಳು ಸೇರಿದಂತೆ ಹಲವಾರು ವಿಷಯಗಳನ್ನು ಲೋಕ ಅದಾಲತ್‌ನಲ್ಲಿ ರಾಜಿ-ಸಂಧಾನದ ಮೂಲಕ ಬಗೆಹರಿಸಿಕೊಳ್ಳಬಹುದಾಗಿದೆ ಎಂದರು.
“ನ್ಯಾಯಾಲಯದಲ್ಲಿ ರಾಜಿ ಮಾಡಿಕೊಂಡರೆ ಮಾನವ ಸಂಬಂಧಗಳು ಉಳಿದುಕೊಳ್ಳುತ್ತವೆ, ಶಾಂತಿ-ನೆಮ್ಮದಿ ಕಾಪಾಡಲ್ಪಡುತ್ತದೆ. ಜೊತೆಗೆ ಕಕ್ಷಿದಾರರ ಅಮೂಲ್ಯವಾದ ಸಮಯ ಹಾಗೂ ಹಣ ಉಳಿಯುತ್ತದೆ,” ಎಂದು ಅವರು ತಿಳಿಸಿದರು.
ರಾಜಿಗೆ ಯೋಗ್ಯವಾದ ಪ್ರಕರಣಗಳು ಹಾಗೂ ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಬಗೆಹರಿಸಲು ಬಯಸುವ ಕಕ್ಷಿದಾರರು ತಮ್ಮ ವಕೀಲರ ಮೂಲಕ ಅಥವಾ ಸ್ವತಃ ಹಾಜರಾಗಿ ಭಾಗವಹಿಸುವಂತೆ ಅವರು ವಿನಂತಿಸಿದರು.
ಕಾರ್ಯಕ್ರಮದಲ್ಲಿ ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಎಸ್. ರಂಜಿತ್, ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ಎ. ನಾರಾಯಣಸ್ವಾಮಿ, ಕಾರ್ಯದರ್ಶಿ ಸಿ.ಜಿ. ಭಾಸ್ಕರ್ ಹಾಗೂ ಹಲವರು ಉಪಸ್ಥಿತರಿದ್ದರು.