Sidlaghatta : “ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಯಲ್ಲಿ ಆಡಳಿತ ಯಂತ್ರದ ಚಾಲಕ ಶಕ್ತಿಯಾಗಿರುವ ಸರ್ಕಾರಿ ನೌಕರರ ಪಾತ್ರ ಅತ್ಯಂತ ದೊಡ್ಡದು. ಕ್ಷೇತ್ರದ ಪ್ರತಿಯೊಂದು ಜನಕಲ್ಯಾಣ ಯೋಜನೆಗಳು ಜನರಿಗೆ ತಲುಪಲು ನೌಕರರು ಶ್ರಮಿಸಬೇಕು, ಅವರ ಹಿತ ಕಾಯುವುದು ನಮ್ಮ ಕರ್ತವ್ಯ,” ಎಂದು ಶಾಸಕ ಬಿ.ಎನ್.ರವಿಕುಮಾರ್ ತಿಳಿಸಿದರು.
ತಾಲ್ಲೂಕಿನ ಮೇಲೂರು ಗ್ರಾಮದ ತಮ್ಮ ಗೃಹ ಕಚೇರಿಯಲ್ಲಿ ಸೋಮವಾರ ಆಯೋಜಿಸಲಾಗಿದ್ದ ಸರ್ಕಾರಿ ನೌಕರರ ಸಂಘದ 2026ನೇ ಸಾಲಿನ ಕ್ಯಾಲೆಂಡರ್ ಬಿಡುಗಡೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಈ ಸಂದರ್ಭದಲ್ಲಿ ಸರ್ಕಾರಿ ನೌಕರರ ಸಂಘದ ವತಿಯಿಂದ ಶಾಸಕರನ್ನು ಆತ್ಮೀಯವಾಗಿ ಸನ್ಮಾನಿಸಲಾಯಿತು.
ನೌಕರರ ದಶಕಗಳ ಬೇಡಿಕೆಗಳ ಕುರಿತು ಮಾತನಾಡಿದ ಶಾಸಕರು, “ಈಗಾಗಲೇ ತಾಲ್ಲೂಕಿನಲ್ಲಿ ನೌಕರರ ಭವನ ನಿರ್ಮಾಣ ಕಾಮಗಾರಿ ವೇಗವಾಗಿ ಪ್ರಗತಿಯಲ್ಲಿದೆ. ಶಿಕ್ಷಕರ ಬಹುದಿನದ ಕನಸಾಗಿರುವ ‘ಗುರು ಭವನ’ ನಿರ್ಮಾಣ ಕಾಮಗಾರಿಗೂ ಶೀಘ್ರದಲ್ಲೇ ಚಾಲನೆ ನೀಡಲಾಗುವುದು. ನೌಕರರಿಗೆ ಅಗತ್ಯವಿರುವ ಮೂಲಭೂತ ಸೌಕರ್ಯಗಳನ್ನು ಒದಗಿಸಲು ನಾನು ಬದ್ಧನಾಗಿದ್ದೇನೆ,” ಎಂದು ಭರವಸೆ ನೀಡಿದರು.

ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ತಹಶೀಲ್ದಾರ್ ಗಗನಸಿಂಧು ಅವರು ಆಡಳಿತಾತ್ಮಕ ವಿಷಯಗಳ ಬಗ್ಗೆ ಚರ್ಚಿಸಿದರು. ಸರ್ಕಾರಿ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ಕೆ.ಎನ್.ಸುಬ್ಬಾರೆಡ್ಡಿ ಮಾತನಾಡಿ, ನೌಕರರ ಸಮಸ್ಯೆಗಳಿಗೆ ಶಾಸಕರು ಸದಾ ಸಕಾರಾತ್ಮಕವಾಗಿ ಸ್ಪಂದಿಸುತ್ತಿದ್ದಾರೆ ಎಂದು ಹರ್ಷ ವ್ಯಕ್ತಪಡಿಸಿದರು.
ಸಂಘದ ಕಾರ್ಯದರ್ಶಿ ಕೆಂಪೇಗೌಡ, ಅಕ್ಕಲರೆಡ್ಡಿ, ತಾಲ್ಲೂಕು ಪ್ರೌಢಶಾಲಾ ಸಹಶಿಕ್ಷಕರ ಸಂಘದ ಅಧ್ಯಕ್ಷ ಎಲ್.ವಿ.ವೆಂಕಟರೆಡ್ಡಿ, ಕಾರ್ಯದರ್ಶಿ ಎಚ್.ಎಸ್.ರುದ್ರೇಶಮೂರ್ತಿ, ಅಕ್ಷರದಾಸೋಹದ ಆಂಜನೇಯ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ನೌಕರರ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.