Sidlaghatta : ಶಿಡ್ಲಘಟ್ಟ ತಾಲ್ಲೂಕಿನ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತರು ಹಾಗೂ ದಲಿತ ಮುಖಂಡರು ಗುರುವಾರ ನಾಗಪುರದ ಡಾ. ಬಿ.ಆರ್. ಅಂಬೇಡ್ಕರ್ ದೀಕ್ಷಾಭೂಮಿಗೆ ಯಾತ್ರೆ ಬೆಳೆಸಿದರು.
ನಗರದ ತಾಲ್ಲೂಕು ಕಚೇರಿ ಮುಂಭಾಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಯಾತ್ರೆಗೆ ನಗರ ಪೊಲೀಸ್ ಠಾಣೆಯ ಪಿ.ಎಸ್.ಐ ವೇಣುಗೋಪಾಲ್ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಜಗದೀಶ್ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ಮಾತನಾಡಿದ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಮೇಲೂರು ಮಂಜುನಾಥ್ ಅವರು, “ದೀಕ್ಷಾಭೂಮಿ ಯಾತ್ರೆಯ ಮುಖ್ಯ ಉದ್ದೇಶವೆಂದರೆ ಡಾ. ಬಿ.ಆರ್. ಅಂಬೇಡ್ಕರ್ ಅವರು ಬೌದ್ಧ ಧರ್ಮ ಸ್ವೀಕರಿಸಿದ ಪವಿತ್ರ ಸ್ಥಳಕ್ಕೆ ಭೇಟಿ ನೀಡಿ, ಅವರ ಆದರ್ಶಗಳನ್ನು ಅಳವಡಿಸಿಕೊಳ್ಳುವುದು ಮತ್ತು ಸಮಾನತೆಯ ತತ್ವಗಳನ್ನು ಪಾಲಿಸುವುದು. ಸಮಾಜ ಕಲ್ಯಾಣ ಇಲಾಖೆಯ ಆಶ್ರಯದಲ್ಲಿ ಆಯೋಜಿಸಲ್ಪಟ್ಟ ಈ ಯಾತ್ರೆ, ಬಡ ವರ್ಗದ ಜನರಿಗೆ ಡಾ. ಅಂಬೇಡ್ಕರ್ ಅವರ ಜೀವನದಿಂದ ಸ್ಫೂರ್ತಿ ಪಡೆಯುವ ಸುವರ್ಣಾವಕಾಶ” ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಸಂಘಟನಾ ಸಂಚಾಲಕ ದಡಂಘಟ್ಟ ತಿರುಮಲೇಶ್, ಸೊಣ್ಣಪ್ಪ, ನರಸಿಂಹಮೂರ್ತಿ, ನಾರಾಯಣಸ್ವಾಮಿ, ಹಾಸ್ಟೆಲ್ ಬಾಬು ಸೇರಿದಂತೆ ಅನೇಕರು ಹಾಜರಿದ್ದರು.