Home News ಪೋಷಣ್ ಅಭಿಯಾನ ಸಮಾರೋಪ ಸಮಾರಂಭ

ಪೋಷಣ್ ಅಭಿಯಾನ ಸಮಾರೋಪ ಸಮಾರಂಭ

0
Sidlaghatta Kotahalli Poshan Abhiyaan

Kotahalli, Sidlaghatta : ಪೌಷ್ಟಿಕ, ಸಮತೋಲನ ಆಹಾರ ಸೇವನೆಯಿಂದ ಗರ್ಭಿಣಿ ಮತ್ತು ಮಗು ಇಬ್ಬರು ಆರೋಗ್ಯವಂತರಾಗಿರಲು ಸಾಧ್ಯ. ಉತ್ತಮ ಆರೋಗ್ಯವಂತ ಗರ್ಭಿಣಿ ಹಾಗೂ ಮಕ್ಕಳು ದೇಶದ ಅಭಿವೃದ್ದಿಯಲ್ಲಿ ಮುಖ್ಯ ಪಾತ್ರವಹಿಸುತ್ತಾರೆ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ವೆಂಕಟೇಶಮೂರ್ತಿ ತಿಳಿಸಿದರು.

ತಾಲ್ಲೂಕಿನ ಕೋಟಹಳ್ಳಿ ಗ್ರಾಮದಲ್ಲಿನ ಅಂಗನವಾಡಿ ಕೇಂದ್ರದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಪೋಷಣ್ ಅಭಿಯಾನ ಮಾಸಾಚರಣೆಯ ಸಮಾರೋಪ ಸಮಾರಂಭ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಗರ್ಭಿಣಿ, ಬಾಣಂತಿಯರು ಹಾಗೂ ಮಕ್ಕಳಿಗೆ ಪೌಷ್ಟಿಕತೆಯ ಕೊರತೆಯಾಗದಂತೆ ನೋಡಿಕೊಳ್ಳುವ ನಿಟ್ಟಿನಲ್ಲಿ ಪೋಷಣ್ ಮಾಸಾಚರಣೆ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಅಂಗನವಾಡಿ ಕೇಂದ್ರಗಳಲ್ಲಿ ಗರ್ಭಿಣಿಯರಿಗೆ ಮತ್ತು ಆರು ವರ್ಷದ ಒಳಗಿನ ಮಕ್ಕಳಿಗೆ ಪೌಷ್ಟಿಕ ಆಹಾರವನ್ನು ನೀಡುವ ಕಾರ್ಯಕ್ರಮ ಇದೆ. ಜತೆಗೆ ತಾಯಂದರಿಗೆ ಪೌಷ್ಟಿಕ ಆಹಾರದ ಸೇವನೆಯ ಬಗೆ, ಅದರ ಪ್ರಾಮುಖ್ಯತೆ ಬಗ್ಗೆ ಅರಿವು ಮೂಡಿಸುವ ಕಾರ್ಯಗಳನ್ನು ನಿರಂತರವಾಗಿ ಹಮ್ಮಿಕೊಳ್ಳಲಾಗುತ್ತಿದೆ ಎಂದು ವಿವರಿಸಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಎಸಿಡಿಪಿಒ ಲಕ್ಷ್ಮಿದೇವಮ್ಮ ಮಾತನಾಡಿ, ತಾಲ್ಲೂಕಿನಲ್ಲಿ 54 ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದರು. ಅವರಿಗೆ ನಿರಂತರವಾಗಿ ಪೌಷ್ಟಿಕ ಆಹಾರವನ್ನು ನೀಡುವುದರ ಜತೆಗೆ ಅವರ ತಾಯಂದರಿಗೆ ಅರಿವು ಮೂಡಿಸಿದರ ಪರಿಣಾಮ ಇದೀಗ ತಾಲ್ಲೂಕಿನಲ್ಲಿ ಕೇವಲ 9 ಮಂದಿ ಮಾತ್ರವೇ ಅಪೌಷ್ಟಿಕತೆ ಸಮಸ್ಯೆಯಿಂದ ಬಳಲುತ್ತಿರುವ ಮಕ್ಕಳಿದ್ದಾರೆ ಎಂದು ಹೇಳಿದರು.

ನಮ್ಮ ಸುತ್ತ ಮುತ್ತ ಸಿಗುವ ನಾನಾ ಬಗೆಯ ಸೊಪ್ಪು ತರಕಾರಿ ಹಣ್ಣು ಮತ್ತು ಮನೆಯಲ್ಲಿ ತಯಾರಿಸುವಂತ ಪೌಷ್ಟಿಕ ಆಹಾರಗಳನ್ನು ತಯಾರಿಸಿ ಪ್ರದರ್ಶನಕ್ಕಿಟ್ಟು ಅವುಗಳ ಬಗ್ಗೆ ಜಾಗೃತಿ ಮೂಡಿಸಲಾಯಿತು.

ಗ್ರಾಮ ಪಂಚಾಯಿತಿ ಸದಸ್ಯೆ ನಿವೇದಿತ, ತಾಲ್ಲೂಕು ಆರೋಗ್ಯ ನಿರೀಕ್ಷಣಾಧಿಕಾರಿ ದೇವರಾಜ್, ಮೇಲ್ವಿಚಾರಕಿ ಶಶಿಕಲಾ, ಪೋಷಣ್ ಅಭಿಯಾನದ ಸಂಯೋಜಕ ಕೆ.ಎನ್.ಶಿವಪ್ಪ, ಶಾಲಾ ಮುಖ್ಯೋಪಾಧ್ಯಾಯ ನಾಗರಾಜ್. ಸಿ.ಆರ್.ಟಿ ಅಧ್ಯಕ್ಷ ಸತೀಶ್ ಭಾರತಿ, ಆರೋಗ್ಯ ಇಲಾಖೆಯ ಗಾಯಿತ್ರಿ, ಸರಸ್ವತಿ ಹಾಗೂ ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಗರ್ಭಿಣಿ ಸ್ತ್ರೀಯರು, ಗ್ರಾಮದ ಮಹಿಳೆಯರು ಕಾರ್ಯಕ್ರಮದಲ್ಲಿ ಹಾಜರಿದ್ದರು.

For Daily Updates WhatsApp ‘HI’ to 7406303366

NO COMMENTS

LEAVE A REPLY

Please enter your comment!
Please enter your name here

error: Content is protected !!
Exit mobile version