Sidlaghatta : ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಸಂಯುಕ್ತ ಆಶ್ರಯದಲ್ಲಿ ಜೂನ್ 28ರಂದು ನಡೆಯಲಿರುವ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಅಭಿಯಾನದ ಅಂಗವಾಗಿ ತಾಲ್ಲೂಕಿನ ಮೇಲೂರು ಗ್ರಾಮದ ಶಾಸಕರ ಗೃಹ ಕಚೇರಿಯಲ್ಲಿ ಗುರುವಾರ ಪಲ್ಸ್ ಪೋಲಿಯೋ ಕಾರ್ಯಕ್ರಮದ ಪ್ರಕಟಣಾ ಪತ್ರಿಕೆಯನ್ನು ಶಾಸಕ ಬಿ.ಎನ್. ರವಿಕುಮಾರ್ ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ದೇಶವನ್ನು ಪೋಲಿಯೋ ಮುಕ್ತವಾಗಿಡುವ ಉದ್ದೇಶದಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನಿರಂತರವಾಗಿ ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸುತ್ತಿವೆ. ಈ ಹಿನ್ನೆಲೆಯಲ್ಲಿ ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದಲ್ಲಿ ಸುಮಾರು 20,750 ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ ನೀಡುವ ಗುರಿ ಹೊಂದಲಾಗಿದೆ ಎಂದು ತಿಳಿಸಿದರು.
ಒಂದು ವರ್ಷದಿಂದ ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೂ ಎರಡು ಹನಿ ಪಲ್ಸ್ ಪೋಲಿಯೋ ಔಷಧಿಯನ್ನು ಕಡ್ಡಾಯವಾಗಿ ಹಾಕಿಸಬೇಕು. ಇದಕ್ಕಾಗಿ ಪೋಷಕರು ಸಮೀಪದ ಸರ್ಕಾರಿ ಶಾಲೆಗಳು, ಅಂಗನವಾಡಿ ಕೇಂದ್ರಗಳು ಹಾಗೂ ಆರೋಗ್ಯ ಇಲಾಖೆಯು ಗುರುತಿಸಿರುವ ಲಸಿಕಾ ಕೇಂದ್ರಗಳಿಗೆ ಮಕ್ಕಳನ್ನು ಕರೆತಂದು ಲಸಿಕೆ ಹಾಕಿಸಬೇಕು ಎಂದು ಮನವಿ ಮಾಡಿದರು.
ಪೋಲಿಯೋ ನಿರ್ಮೂಲನೆಗಾಗಿ ಸರ್ಕಾರ ಹಮ್ಮಿಕೊಂಡಿರುವ ಈ ಮಹತ್ವದ ಆರೋಗ್ಯ ಕಾರ್ಯಕ್ರಮದಲ್ಲಿ ಪ್ರತಿಯೊಬ್ಬ ಪೋಷಕರು ಸಹಕರಿಸಬೇಕು. ಯಾವುದೇ ಮಗು ಲಸಿಕೆಯಿಂದ ವಂಚಿತವಾಗದಂತೆ ನೋಡಿಕೊಳ್ಳುವುದು ಎಲ್ಲರ ಜವಾಬ್ದಾರಿಯಾಗಿದೆ. ಶಿಡ್ಲಘಟ್ಟ ತಾಲ್ಲೂಕಿನಲ್ಲಿ ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು ಶೇ 100ರಷ್ಟು ಯಶಸ್ವಿಗೊಳಿಸಲು ಆರೋಗ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಸಮರ್ಪಕವಾಗಿ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.
ಈ ಸಂದರ್ಭದಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ವೆಂಕಟೇಶ ಮೂರ್ತಿ, ತಾಲ್ಲೂಕು ಆರೋಗ್ಯ ನಿರೀಕ್ಷಣಾಧಿಕಾರಿ ದೇವರಾಜ್ ಸೇರಿದಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಹಾಜರಿದ್ದರು.
ಶಿಡ್ಲಘಟ್ಟ ತಾಲ್ಲೂಕಿನಲ್ಲಿ ಪೋಲಿಯೋ ಲಸಿಕೆ ಹಾಕಬೇಕಿರುವ ಮಕ್ಕಳ ಸಂಖ್ಯೆ 20,755
ಒಟ್ಟು ಪೋಲಿಯೊ ಭೂತ್ : 106
ಒಟ್ಟು ಲಸಿಕೆ ಹಾಕುವವರು : 424 ಮಂದಿ
ಸೂಪರ್ವೈಸರ್ : 23
ಒಟ್ಟು ಮನೆಗಳು : 47,125
ಎರಡನೇ ದಿನದಿಂದ ಮನೆಗೆ ಮನೆಗೆ ಭೇಟಿ ನೀಡಿ ಉಳಿದ ಮಕ್ಕಳಿಗೆ ಲಸಿಕೆ ಹಾಕುವರು.








