Sidlaghatta : ಶಿಡ್ಲಘಟ್ಟ ನಗರದ ಮುತ್ತೂರು ಬೀದಿಯ ರಾಘವೇಂದ್ರಸ್ವಾಮಿ ಮಠದಲ್ಲಿ ರಾಯರ 354 ನೇ ಆರಾಧನಾ ಮಹೋತ್ಸವವನ್ನು ಶ್ರದ್ಧಾ ಭಕ್ತಿಯಿಂದ ಸೋಮವಾರ ಆಚರಿಸಲಾಯಿತು.
ಈ ಸಂದರ್ಭದಲ್ಲಿ ದೇವಾಲಯದಲ್ಲಿ ವಿಶೇಷ ಪೂಜಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಮೂರು ದಿನಗಳ ಕಾಲ ನಡೆಸುವ ಆರಾಧನಾ ಮಹೋತ್ಸವವು ಭಾನುವಾರ ಪ್ರಾರಂಭವಾಯಿತು.
ಸುಪ್ರಭಾತ ಸೇವೆ, ಪಂಚಾಮೃತ ಅಭಿಷೇಕ, ಸಹಸ್ರನಾಮಾರ್ಚನೆ, ಹಸ್ತೋದಕ, ಮಹಾಮಂಗಳಾರತಿ ನಡೆಯಿತು. ರಾಯರಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು. ಸುಪ್ರಭಾತ ಸೇವೆ, ಪಂಚಾಮೃತ ಅಭಿಷೇಕ, ಸಹಸ್ರ ನಾಮಾರ್ಚನೆ, ಉತ್ಸವವನ್ನು ನೆರವೇರಿಸಲಾಯಿತು.
ಭಾನುವಾರ ಸಂಜೆ ಶ್ರೀ ಗಾಯಿತ್ರಿ ಮಹಿಳಾ ಮಂಡಳಿಯವರಿಂದ ಭಕ್ತಿಗೀತೆಗಳು ಮತ್ತು ಶ್ರೀಕಾಂತಂ ನಾಗೇಂದ್ರ ಶಾಸ್ತ್ರಿ, ಆನೂರು ಅನಂತಕೃಷ್ಣ ಶರ್ಮ ತಂಡದಿಂದ ಶಾಸ್ತ್ರೀಯ ಸಂಗೀತ ಆಯೋಜಿಸಲಾಗಿತ್ತು.
ಸೋಮವಾರ ನಗರದ ಪ್ರಮುಖ ರಸ್ತೆಗಳಲ್ಲಿ ರಾಯರ ಮೆರವಣಿಗೆಯನ್ನು ಆಯೋಜಿಸಲಾಗಿತ್ತು. ಉತ್ಸವ ಮೂರ್ತಿಗೆ ಭಕ್ತರು ಪೂಜೆ ಸಲ್ಲಿಸಿದರು. ಮೆರವಣಿಗೆ ಹಾದು ಹೋದ ರಸ್ತೆಗಳನ್ನು ಸಾರಿಸಿ ರಂಗವಲ್ಲಿ ಹಾಕಿ ಉತ್ಸವಕ್ಕೆ ಸ್ವಾಗತ ಕೋರಲಾಗಿತ್ತು.
ದೇವಾಲಯದ ಆವರಣದಲ್ಲಿ ರಾಘವೇಂದ್ರ ಸೇವಾ ಟ್ರಸ್ಟ್ ವತಿಯಿಂದ ಸಾಮೂಹಿಕ ಅನ್ನಸಂತರ್ಪಣೆಯನ್ನು ನಡೆಸಲಾಯಿತು.
ಈ ಸಂದರ್ಭದಲ್ಲಿ ರಾಘವೇಂದ್ರ ಸೇವಾ ಟ್ರಸ್ಟ್ ಅಧ್ಯಕ್ಷ ಎಸ್.ವಿ. ನಾಗರಾಜರಾವ್, ಕಾರ್ಯದರ್ಶಿ ಎನ್. ಶ್ರೀಕಾಂತ್, ಖಜಾಂಚಿ ಆರ್. ಮಧುಸೂದನ್, ಟ್ರಸ್ಟೀಗಳಾದ ಎ.ಎಸ್. ರವಿ, ಬಿ.ಕೃಷ್ಣಮೂರ್ತಿ, ಬಿ. ಆರ್. ಸುಧೀಂದ್ರ, ಬಿ. ಆರ್. ರವಿ, ವಿ.ಕೃಷ್ಣ , ಮಧು, ಹರೀಶ್, ವೆಂಕಟೇಶ್, ಬಾಸ್ಕರ್ , ಮಂಜುನಾಥ್ ಹಾಜರಿದ್ದರು.







