
Sidlaghatta : ಶಿಕ್ಷಣದ ಜೊತೆಗೆ ಸಂಸ್ಕಾರವನ್ನು ಎಳೆಯ ವಯಸ್ಸಿನಿಂದಲೇ ಮಕ್ಕಳಿಗೆ ಕಲಿಸಿದಾಗ ಅವರು ಉತ್ತಮ ನಾಗರಿಕರಾಗಿ ಸಮಾಜಕ್ಕೆ ಉಪಯುಕ್ತರಾಗುತ್ತಾರೆ ಎಂದು ರಾಯಲ್ ಇಂಗ್ಲಿಷ್ ಪಬ್ಲಿಕ್ ಶಾಲೆಯ ವ್ಯಸಸ್ಥಾಪಕ ದೇವರಾಜ್ ತಿಳಿಸಿದರು.
ತಾಲ್ಲೂಕಿನ ಬೂದಾಳದ ರಾಯಲ್ ಇಂಗ್ಲಿಷ್ ಪಬ್ಲಿಕ್ ಶಾಲೆಯಲ್ಲಿ ಶನಿವಾರ ಏರ್ಪಡಿಸಲಾಗಿದ್ದ ಮಾತಾ ಪಿತೃ ವಂದನೆ ಮತ್ತು ಅಕ್ಷರಾಭ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಗ್ರಾಮೀಣ ಭಾಗದ ಮಕ್ಕಳು ಉತ್ತಮ ಶಿಕ್ಷಣದಿಂದ ವಂಚಿತರಾಗಬಾರದು. ಗುಣ ಮಟ್ಟದ ಶಿಕ್ಷಣದೊಂದಿಗೆ ಜೀವನ ಕ್ರಮ, ಸಂಸ್ಕೃತಿ, ಆಚಾರ, ವಿಚಾರ, ಸಂಸ್ಕಾರಗಳನ್ನು ಮಕ್ಕಳಿಗೆ ಕಲಿಸುವ ಉದ್ದೇಶದಿಂದ ಶಿಕ್ಷಕರು ಶ್ರಮ ವಹಿಸುತ್ತಿದ್ದಾರೆ ಎಂದು ಹೇಳಿದರು.
ರಾಯಲ್ ಇಂಗ್ಲಿಷ್ ಪಬ್ಲಿಕ್ ಶಾಲೆಯ ಪ್ರಾಂಶುಪಾಲ ಭಾಸ್ಕರ್ ಮಾತನಾಡಿ, ನಮ್ಮ ಸಂಸ್ಕೃತಿಯನ್ನು ಆಚರಣೆಯ ಮೂಲಕ ಮಕ್ಕಳಿಗೆ ತಿಳಿಸಿಕೊಡುತ್ತಿದ್ದೇವೆ. ನಮ್ಮ ಶಾಲೆಗೆ ದಾಖಲಾದ ಎಲ್. ಕೆ.ಜಿ ಮಕ್ಕಳಿಗೆ ಅಕ್ಷರಾಭ್ಯಾಸ ಮಾಡಿಸುವ ಮೂಲಕ ಅವರ ಮುಂದಿನ ವ್ಯಾಸಂಗ ಸೂಸೂತ್ರವಾಗಿ ಸಾರಲಿ ಎಂಬ ಸದುದ್ದೇಶದಿಂದ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ ಎಂದರು
ಮಕ್ಕಳು ಅಮ್ಮನ ತೊಡೆ ಮೇಲೆ ಕುಳಿತು ಅಕ್ಷರಾಭ್ಯಾಸವನ್ನು ಪ್ರಾರಂಭಿಸಿದರು. ಅರ್ಚಕ ವೈ.ಎನ್. ದಾಶರಥಿ ಮಾರ್ಗದರ್ಶನ ಮಾಡಿದರು.
ಈ ಸಂದರ್ಭದಲ್ಲಿ ಶಾಲೆಯ ಮುಖ್ಯ ಶಿಕ್ಷಕ ಮಂಜುನಾಥ್ ಮತ್ತು ಇತರ ಶಿಕ್ಷಕರು ಹಾಗೂ ಪೋಷಕರು ಹಾಜರಿದ್ದರು.