
Sidlaghatta : ಬಾಲ್ಯ ವಿವಾಹವು ಮಕ್ಕಳ ಶಿಕ್ಷಣ, ಆರೋಗ್ಯ ಹಾಗೂ ಭವಿಷ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ಇದನ್ನು ತಡೆಗಟ್ಟಲು ಸಮಾಜದ ಎಲ್ಲರೂ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು “ಬೇಟಿ ಬಚಾವೋ, ಬೇಟಿ ಪಡಾವೋ” ಜಿಲ್ಲಾ ಸಂಯೋಜಕ ರಮೇಶ್ ಹೇಳಿದರು.
ತಾಲ್ಲೂಕಿನ ತಲಕಾಯಲಬೆಟ್ಟ ಗ್ರಾಮ ಪಂಚಾಯಿತಿಯಲ್ಲಿ ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ, ಆರೋಗ್ಯ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದಲ್ಲಿ ಗುರುವಾರ ಆಯೋಜಿಸಿದ್ದ “ಬೇಟಿ ಬಚಾವೋ, ಬೇಟಿ ಪಡಾವೋ” ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಬಾಲ್ಯ ವಿವಾಹ ನಡೆಯದಂತೆ ಮುನ್ನೆಚ್ಚರಿಕೆ ವಹಿಸುವುದು ಪ್ರತಿಯೊಬ್ಬರ ಕರ್ತವ್ಯ. ಬಾಲ್ಯ ವಿವಾಹದ ದುಷ್ಪರಿಣಾಮಗಳ ಕುರಿತು ಪೋಷಕರು ಹಾಗೂ ಗ್ರಾಮಸ್ಥರಲ್ಲಿ ಜಾಗೃತಿ ಮೂಡಿಸಬೇಕು. ಬಾಲಕಿಯರ ಶಿಕ್ಷಣಕ್ಕೆ ಉತ್ತೇಜನ ನೀಡುವ ಮೂಲಕ ಅವರ ಭವಿಷ್ಯವನ್ನು ಉತ್ತಮಗೊಳಿಸಬೇಕು ಎಂದರು.
ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಶಿಕ್ಷಕರು ತಮ್ಮ ವ್ಯಾಪ್ತಿಯಲ್ಲಿ ಬಾಲ್ಯ ವಿವಾಹದಂತಹ ಪ್ರಕರಣಗಳು ಕಂಡುಬಂದಲ್ಲಿ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದು, ತಡೆಗಟ್ಟುವಲ್ಲಿ ಸಕ್ರಿಯ ಪಾತ್ರ ವಹಿಸಬೇಕು. ಪ್ರತಿಯೊಬ್ಬರೂ ತಮ್ಮ ಕರ್ತವ್ಯ ಹಾಗೂ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸಬೇಕು ಎಂದು ತಿಳಿಸಿದರು.
ಬಾಲಕಿಯರ ಶಿಕ್ಷಣ ಮುಂದುವರಿಯಲು ಅಗತ್ಯ ನೆರವು, ಆರೋಗ್ಯ ಸೇವೆ ಹಾಗೂ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳನ್ನು ಅರ್ಹರಿಗೆ ತಲುಪಿಸುವಂತೆ ಅಧಿಕಾರಿಗಳು ಕ್ರಮವಹಿಸಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶ್ರೀನಿವಾಸಪ್ಪ, ಕಾರ್ಯದರ್ಶಿ ಪದ್ಮಾವತಮ್ಮ, ಶಿಕ್ಷಕ ವೆಂಕಟರೆಡ್ಡಿ, ಗ್ರಾಮ ಪಂಚಾಯಿತಿ ಸಿಬ್ಬಂದಿ, ಶಾಲಾ ಮಕ್ಕಳು, ಆಶಾ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಭಾಗವಹಿಸಿದ್ದರು.
ತಾಲ್ಲೂಕಿನಲ್ಲಿ ಈ ಹಿಂದೆಯೂ ಬಾಲ್ಯ ವಿವಾಹ ತಡೆಗೆ ಸಂಬಂಧಿಸಿದ ಪ್ರಕರಣವೊಂದು ವರದಿಯಾಗಿತ್ತು.
In English: At a “Beti Bachao, Beti Padhao” (Save the Daughter, Educate the Daughter) awareness program at Talakayalabetta gram panchayat, district coordinator Ramesh said child marriage seriously harms children’s education, health and future, and called on everyone to act responsibly to prevent it. He urged ASHA workers, anganwadi workers and teachers to report any child marriage cases to authorities and to promote girls’ education and access to government welfare schemes.