Sidlaghatta : ಮಕ್ಕಳಲ್ಲಿ ಹುಟ್ಟಿನಿಂದಲೇ ಇರುವ ಅರಿವನ್ನು ಜಾಗೃತಗೊಳಿಸುವ ಮತ್ತು ಅವರಲ್ಲಿ ಸುಪ್ತವಾಗಿ ಅಡಗಿರುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವ ಕೆಲಸ ಶಾಲಾ ಹಂತದಿಂದಲೇ ಆಗಬೇಕು ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ (EO) ಆರ್. ಹೇಮಾವತಿ ತಿಳಿಸಿದರು.
ನಗರದ ಹೊರವಲಯದ ವರದನಾಯಕನಹಳ್ಳಿ ಗೇಟ್ ಬಳಿಯಿರುವ ಯೂನಿವರ್ಸಲ್ ಶಾಲಾ ಆವರಣದಲ್ಲಿ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ತಾಲ್ಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳ ‘ಪ್ರತಿಭಾ ಕಾರಂಜಿ’ ಸ್ಪರ್ಧೆಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು. “ಕೇವಲ ಬಹುಮಾನಗಳಿಗಾಗಿ ಸ್ಪರ್ಧೆಗಳಲ್ಲಿ ಭಾಗವಹಿಸುವುದಕ್ಕಿಂತ, ಬದುಕಿನ ಶಿಕ್ಷಣ ಮತ್ತು ಉಜ್ವಲ ಭವಿಷ್ಯಕ್ಕಾಗಿ ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲಿ ನಿರಂತರ ಶ್ರಮ ಹಾಕಬೇಕು,” ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ತಹಶೀಲ್ದಾರ್ ಗಗನಸಿಂಧು ಮಾತನಾಡಿ, “ಬಿಡುವಿನ ಸಮಯವನ್ನು ಸೃಜನಶೀಲ ಚಟುವಟಿಕೆಗಳಿಗೆ ಬಳಸಿಕೊಳ್ಳುವ ಮೂಲಕ ಕೌಶಲಗಳನ್ನು ವೃದ್ಧಿಸಿಕೊಳ್ಳಬೇಕು. ಇದು ಉತ್ತಮ ವ್ಯಕ್ತಿತ್ವ ರೂಪಿಸಲು ಸಹಕಾರಿ. ಜಿಲ್ಲಾಮಟ್ಟದಲ್ಲಿ ತಾಲ್ಲೂಕನ್ನು ಪ್ರತಿನಿಧಿಸಿ ವಿಜೇತರಾಗುವ ಮಕ್ಕಳನ್ನು ತಾಲ್ಲೂಕು ಆಡಳಿತದ ವತಿಯಿಂದ ವಿಶೇಷವಾಗಿ ಸನ್ಮಾನಿಸಲಾಗುವುದು,” ಎಂದು ಘೋಷಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎ. ನರೇಂದ್ರಕುಮಾರ್ ಮಾತನಾಡಿ, ಪ್ರತಿಭಾ ಕಾರಂಜಿಯು ಮಕ್ಕಳಲ್ಲಿ ನಾಯಕತ್ವ ಗುಣ ಮತ್ತು ಸ್ಪರ್ಧಾ ಮನೋಭಾವವನ್ನು ಬೆಳೆಸುತ್ತದೆ ಎಂದರು.
ಈ ಸಂದರ್ಭದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ಕಾರ್ಯದರ್ಶಿ ಕೆ.ಎನ್. ಸುಬ್ಬಾರೆಡ್ಡಿ, ಹಂಡಿಗನಾಳ ಗ್ರಾ.ಪಂ ಅಧ್ಯಕ್ಷೆ ವೆಂಕಟಲಕ್ಷ್ಮಮ್ಮ ಸೇರಿದಂತೆ ಶಿಕ್ಷಣ ಇಲಾಖೆಯ ವಿವಿಧ ಅಧಿಕಾರಿಗಳು ಮತ್ತು ಶಿಕ್ಷಕ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು. ಸ್ಪರ್ಧೆಗಳಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು ಮತ್ತು ವಿದ್ಯಾರ್ಥಿಗಳು ನಡೆಸಿಕೊಟ್ಟ ಸಾಂಸ್ಕೃತಿಕ ಕಾರ್ಯಕ್ರಮಗಳು ಎಲ್ಲರ ಗಮನ ಸೆಳೆದವು.








