Sidlaghatta : ವಿದ್ಯಾರ್ಥಿಗಳ ಪ್ರತಿಭೆಯನ್ನು ಅನಾವರಣಗೊಳಿಸಲು ಪ್ರತಿಭಾಕಾರಂಜಿ ಉತ್ತಮ ವೇದಿಕೆಯಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎ.ನರೇಂದ್ರಕುಮಾರ್ ಹೇಳಿದರು.
ಹನುಮಂತಪುರ ಗೇಟ್ ಬಳಿಯ ಬಿಜಿಎಸ್ ಶಾಲಾ ಆವರಣದಲ್ಲಿ ಶುಕ್ರವಾರ ನಡೆದ ತಾಲ್ಲೂಕು ಮಟ್ಟದ ಪ್ರತಿಭಾಕಾರಂಜಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಈ ಕಾರ್ಯಕ್ರಮ ಮಕ್ಕಳಲ್ಲಿ ಅಡಗಿರುವ ಜನಪದ ಕಲೆ ಮತ್ತು ಸಂಸ್ಕೃತಿಯನ್ನು ಹೊರಹಾಕಲು ಹಾಗೂ ಕಲಾ ಮತ್ತು ಸಾಂಸ್ಕೃತಿಕ ಅಭಿರುಚಿ ಬೆಳೆಸಲು ಉಪಯುಕ್ತವಾಗಿದೆ ಎಂದು ಅವರು ಹೇಳಿದರು.
ಮಕ್ಕಳಲ್ಲಿ ಓದುವ, ಕಲಿಯುವ ಹಾಗೂ ಸ್ಪರ್ಧಾತ್ಮಕ ಮನೋಭಾವನೆಯನ್ನು ಚಿಕ್ಕಂದಿನಿಂದಲೇ ಪ್ರೋತ್ಸಾಹಿಸಬೇಕು. ಅಂಕಗಳಿಗಾಗಿ ಕಲಿಕೆ ಮೀರದೆ, ಸೃಜನಾತ್ಮಕ ಚಟುವಟಿಕೆಗಳಲ್ಲಿ ಮಕ್ಕಳನ್ನು ತೊಡಗಿಸಬೇಕಾಗಿದೆ. ಸಿಕ್ಕ ಅವಕಾಶಗಳನ್ನು ಸದುಪಯೋಗ ಪಡಿಸಿಕೊಂಡು, ಅವರ ಸರ್ವತೋಮುಖ ಪ್ರಗತಿಗೆ ಪೋಷಕರು ಮತ್ತು ಶಿಕ್ಷಕರು ಶ್ರಮಿಸಬೇಕಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.
ತಾ.ಪಂ ಇಓ ಹೇಮಾವತಿ ಅವರು ಮಾತನಾಡಿ, ಮಕ್ಕಳಲ್ಲಿ ವಿಶೇಷ ಪ್ರತಿಭೆಗಳಿವೆ. ಒಂದು ಮಗುವನ್ನು ಮತ್ತೊಂದರೊಂದಿಗೆ ಹೋಲಿಸುವ ಬದಲು, ಪೋಷಕರು ಮಕ್ಕಳ ಆಸಕ್ತಿಗಳನ್ನು ಗುರುತಿಸಿ, ಅವರ ಹಾದಿಯನ್ನು ಬೆಂಬಲಿಸಬೇಕಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಕೆ.ಎನ್.ಸುಬ್ಬಾರೆಡ್ಡಿ, ಕಾರ್ಯದರ್ಶಿ ಕೆಂಪೇಗೌಡ, ಬಿಜಿಎಸ್ ಶಾಲೆಯ ಪ್ರಾಂಶುಪಾಲ ಕೆ.ಮಹದೇವ್ ಹಾಗೂ ವಿವಿಧ ಶಾಲೆಗಳ ಶಿಕ್ಷಕರು ಭಾಗವಹಿಸಿದ್ದರು.