
Sidlaghatta : ರಾಷ್ಟ್ರೀಯ ಗ್ರಂಥಾಲಯ ಸಪ್ತಾಹದ (National Library Week) ಅಂಗವಾಗಿ ಕರ್ನಾಟಕ ಸಾರ್ವಜನಿಕ ಗ್ರಂಥಾಲಯ ಇಲಾಖೆ ಆಯೋಜಿಸಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಶಾಲಾ ವಿದ್ಯಾರ್ಥಿಗಳಿಗೆ ಗುರುವಾರ ನಗರದ ಶ್ರೀ ವಾಸವಿ ವಿದ್ಯಾಸಂಸ್ಥೆಯ ಆವರಣದಲ್ಲಿ ಪ್ರಮಾಣಪತ್ರ ಮತ್ತು ಪುಸ್ತಕಗಳನ್ನು ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಬಹುಮಾನ ವಿತರಿಸಿ ಮಾತನಾಡಿದ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಕಾರ್ಯದರ್ಶಿ ಕೆ.ಎನ್. ಸುಬ್ಬಾರೆಡ್ಡಿ ಅವರು, ಪ್ರತಿಭಾವಂತ ಮಕ್ಕಳಲ್ಲಿ ಅಡಗಿರುವ ಪ್ರತಿಭೆಯನ್ನು ಗುರುತಿಸಿ, ಓದಲು ಪ್ರೇರೇಪಿಸುವ ಇಂತಹ ಸ್ಪರ್ಧೆಗಳಲ್ಲಿ ಮಕ್ಕಳು ಪಾಲ್ಗೊಳ್ಳುವುದರಿಂದ ಅವರಲ್ಲಿ ಸ್ಪರ್ಧಾತ್ಮಕ ಮನೋಭಾವ ಮತ್ತು ಮನೋವಿಕಾಸ ಬೆಳೆಯಲು ದಾರಿಯಾಗುತ್ತದೆ ಎಂದು ಹೇಳಿದರು.
ಸಾರ್ವಜನಿಕ ಗ್ರಂಥಾಲಯ ಇಲಾಖೆ ಮತ್ತು ಸರ್. ಎಂ. ವಿಶ್ವೇಶ್ವರಯ್ಯ ಜಿಲ್ಲಾಕೇಂದ್ರ ಗ್ರಂಥಾಲಯಗಳ ಸಂಯುಕ್ತ ಆಶ್ರಯದಲ್ಲಿ ನಡೆಯುವ ಈ ಸ್ಪರ್ಧೆಗಳಿಂದಾಗಿ ಗ್ರಾಮಾಂತರ ಪ್ರದೇಶದ ಮಕ್ಕಳಲ್ಲಿ ಅಡಗಿರುವ ಪ್ರತಿಭೆಗಳ ಅನಾವರಣವಾಗುತ್ತದೆ ಎಂದು ವಾಸವಿ ವಿದ್ಯಾಸಂಸ್ಥೆಯ ಆಡಳಿತಾಧಿಕಾರಿ ರೂಪಸಿ ರಮೇಶ್ ಅಭಿಪ್ರಾಯಪಟ್ಟರು.
ಇದರಿಂದ ಮಕ್ಕಳಿಗೆ ಶಿಕ್ಷಣದ ಜೊತೆಯಲ್ಲಿ ವಿವಿಧ ಬಗೆಯ ವಿಷಯಗಳ ಬಗ್ಗೆ ಆಸಕ್ತಿ ಮೂಡಿ, ಹೆಚ್ಚಿನ ಅಧ್ಯಯನ ಮಾಡಲು ಉತ್ತಮ ಅವಕಾಶಗಳು ದೊರೆಯುತ್ತವೆ ಎಂದರು.
ಈ ಸಂದರ್ಭದಲ್ಲಿ ಗ್ರಂಥ ಪಾಲಕಿ ರಾಮಲೀಲ, ಸಹಾಯಕಿ ಬಾಂಧವ್ಯ, ಪ್ರಗತಿ ಪರ ರೈತ ಸೊಣ್ಣಪ್ಪ ರೆಡ್ಡಿ, ಶಾಲಾ ಮುಖ್ಯ ಶಿಕ್ಷಕ ಶಿವಕುಮಾರ್ ಮತ್ತು ಸಿ. ರವಿ ಹಾಜರಿದ್ದರು.