Sidlaghatta : ಜುಲೈ 8 ರ ಶುಕ್ರವಾರ ಜಿಲ್ಲೆಯ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಟ್ರಸ್ಟ್ (Shri Kshethra Dharmasthala Rural Development Project – SKDRDP) ವತಿಯಿಂದ ಆಯೋಜಿಸಲಾಗಿರುವ ಸ್ವ ಸಹಾಯ ಸಂಘಗಳ ಸಮಾವೇಶ ಹಾಗೂ ಸಮುದಾಯ ಅಭಿವೃದ್ಧಿ ಕಾರ್ಯಕ್ರಮಗಳ ಸೌಲಭ್ಯ ವಿತರಣೆ ಕಾರ್ಯಕ್ರಮಕ್ಕೆ ಶ್ರೀ ಕ್ಷೇತ್ರಧರ್ಮಸ್ಥಳ ಧರ್ಮಾಧಿಕಾರಿಗಳಾದ ಶ್ರೀ ಡಾ.ಡಿ.ವೀರೇಂದ್ರಹೆಗ್ಗಡೆಯವರು (Dr. D. Veerendra Heggade) ಆಗಮಿಸುತ್ತಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಗ್ರಾಮಾಭಿವೃದ್ಧಿ ಯೋಜನೆಯ ಬೆಂಗಳೂರು ಪ್ರಾದೇಶಿಕ ನಿರ್ದೇಶಕ ಎಂ.ಶೀನಪ್ಪ ಮನವಿ ಮಾಡಿದರು.
ನಗರದ ಮುತ್ತೂರು ಬೀದಿಯಲ್ಲಿರುವ ಗ್ರಾಮಾಭಿವೃದ್ದಿ ಯೋಜನಾ ಕಚೇರಿಯಲ್ಲಿ ಪೂಜ್ಯ ಶ್ರೀ ಡಾ.ಡಿ.ವೀರೇಂದ್ರಹೆಗ್ಗಡೆಯವರ ಆಗಮನದ ಹಿನ್ನಲೆಯಲ್ಲಿ ಸೋಮವಾರ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.
ತಾಲ್ಲೂಕಿನಾಧ್ಯಂತ ಕಳೆದ ಎಂಟು ವರ್ಷಗಳಿಂದ ಸಕ್ರಿಯವಾಗಿ ಕಾರ್ಯ ನಿರ್ವಹಿಸುತ್ತಿರುವ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ವತಿಯಿಂದ ಇದೇ ಜುಲೈ 8 ರಂದು ತಾಲ್ಲೂಕಿನ ಬೆಳ್ಳೂಟಿ ಗೇಟ್‌ಬಳಿಯ ಎಸ್ ಎಲ್ ವಿ ಕಲ್ಯಾಣ ಮಂಟಪದ ಹೊರಾಂಗಣದಲ್ಲಿ ಕಾರ್ಯಕ್ರಮ ಆಯೋಜಿಸಿದ್ದು ಶುಕ್ರವಾರ ಬೆಳಗ್ಗೆ 10 ಗಂಟೆಗೆ ನಗರದ ಮುಖ್ಯ ರಸ್ತೆಗಳಲ್ಲಿ ಪೂಜ್ಯರ ಬೃಹತ್ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ. ನಂತರ ವೇದಿಕೆ ಕಾರ್ಯಕ್ರಮ ನಡೆಯಲಿದ್ದು ಕಾರ್ಯಕ್ರಮ ಮುಗಿದ ನಂತರ ಪೂಜ್ಯರಿಂದ ತಾಲ್ಲೂಕಿನ ಕೊತ್ತನೂರು ಕೆರೆಗೆ ಬಾಗಿನ ಅರ್ಪಿಸಲಾಗುವುದು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕ ವಿ.ಮುನಿಯಪ್ಪ ವಹಿಸಲಿದ್ದು ಮುಖ್ಯ ಅತಿಥಿಗಳಾಗಿ ಪೌರಾಡಳಿತ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಟಿ.ಬಿ.ನಾಗರಾಜ್, ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ಸಂಸದ ಎಸ್.ಮುನಿಸ್ವಾಮಿ, ಸೇರಿದಂತೆ ವಿವಿಧ ಗಣ್ಯರು ಭಾಗವಹಿಸಲಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದರು.
ಈ ಸಂದರ್ಭದಲ್ಲಿ ಕಾರ್ಯಕ್ರಮದ ಸ್ವಾಗತ ಸಮಿತಿಯ ದೇವರಾಜ್, ಎ.ಎಂ.ತ್ಯಾಗರಾಜ್, ಸಂತೋಷ್, ಶ್ರೀನಿವಾಸ್, ಸುರೇಂದ್ರಗೌಡ, ಸುರೇಶ್, ವೆಂಕಟೇಶ್, ವೆಂಕಟಸ್ವಾಮಿರೆಡ್ಡಿ, ಜಿಲ್ಲಾ ನಿರ್ದೇಶಕ ಸಿ.ಎಸ್.ಪ್ರಶಾಂತ್, ಯೋಜನಾಧಿಕಾರಿ ಪ್ರಕಾಶ್ ಹಾಜರಿದ್ದರು.