Sidlaghatta : ಡಿಸೆಂಬರ್ 8 ರ ಒಳಗಾಗಿ ಮತಗಟ್ಟೆ ಅಧಿಕಾರಿಗಳು ಮನೆ ಮನೆ ಸಮೀಕ್ಷೆಯನ್ನು ಪೂರ್ಣಗೊಳಿಸಬೇಕೆಂದು ಅಪರ ಜಿಲ್ಲಾಧಿಕಾರಿ ತಿಪ್ಪೇಸ್ವಾಮಿ ತಿಳಿಸಿದರು.
ಶಿಡ್ಲಘಟ್ಟ ನಗರದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಬುಧವಾರ ವಿಶೇಷ ಪರಿಷ್ಕರಣೆ-2023 ರ ಸಂಬಂಧ ಮನೆ-ಮನೆ ಭೇಟಿ ನೀಡಿ ಮತದಾರರ ಪಟ್ಟಿಯಲ್ಲಿರುವ ಲೋಪದೋಷಗಳನ್ನು ಸರಿಪಡಿಸುವ ಕುರಿತು ನಂ.142 ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ 242 ಮತಗಟ್ಟೆ ಮಟ್ಟದ ಅಧಿಕಾರಿಗಳು ಹಾಗೂ ಮತಗಟ್ಟೆ ಮೇಲ್ವಿಚಾರಕರ ಸಭೆಯಲ್ಲಿ ಅವರು ಮಾತನಾಡಿದರು.
2023 ರ ಜನವರಿ 1 ಕ್ಕೆ 18 ವರ್ಷ ಪೂರ್ಣಗೊಂಡಿರುವ ಯುವ ಮತದಾರರನ್ನು ತಪ್ಪದೇ ಮತದಾರರ ಪಟ್ಟಿಯಲ್ಲಿ ಸೇರ್ಪಡೆ ಮಾಡಬೇಕು. ಹಾಗೂ 2023 ರ ಏಪ್ರಿಲ್ 1, ಜುಲೈ 1 ಮತ್ತು ಅಕ್ಟೋಬರ್ 1 – ಈ ದಿನಾಂಕಗಳಿಗೆ 18 ವರ್ಷ ಪೂರ್ಣಗೊಳ್ಳುವ ಮತದಾರರನ್ನು ಮುಂಬರುವ ಮತದಾರರುಗಳನ್ನಾಗಿ ಗುರ್ತಿಸಿ ಸೇರ್ಪಡೆ ಮಾಡಬೇಕು ಎಂದು ಸೂಚಿಸಿದರು.
ಸಭೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ-2023, ಮನೆ-ಮನೆ ಸಮೀಕ್ಷೆ ಕಾರ್ಯ, ನಮೂನೆ-6,7 ಹಾಗೂ 8, ಹೆಚ್ಚಿನ ಸಂಖ್ಯೆಯಲ್ಲಿ ಯುವ ಮತದಾರರ ಸೇರ್ಪಡೆ ಮತ್ತು ಇನ್ನಿತರೆ ಚುನಾವಣಾ ವಿಷಯಗಳ ಕುರಿತು ಚರ್ಚಿಸಲಾಯಿತು.
ತಹಶೀಲ್ದಾರ್ ಬಿ.ಎಸ್.ರಾಜೀವ್, ಜಿಲ್ಲಾಧಿಕಾರಿಗಳ ಕಚೇರಿಯ ತಹಶೀಲ್ದಾರ್ ಸಂಜನಾ, ಎಲ್ಲ ಹೋಬಳಿಯ ರಾಜಸ್ವ ನಿರೀಕ್ಷಕರು, ಗ್ರಾಮಲೆಕ್ಕಿಗರು, BLO ಸೂಪರ್ವೈಸರ್, ಎಲ್ಲ ಮತಗಟ್ಟೆ ಅಧಿಕಾರಿಗಳು ಹಾಜರಿದ್ದರು.