ಶಿಡ್ಲಘಟ್ಟ ತಾಲ್ಲೂಕಿನ ಜಂಗಮಕೋಟೆಯ ಶ್ರೀ ಜ್ಯೋತಿ ವಿದ್ಯಾಸಂಸ್ಥೆಯ ಆವರಣದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಶ್ರೀ ಜ್ಯೋತಿ ವಿದ್ಯಾಸಂಸ್ಥೆಯ ಸಹಭಾಗಿತ್ವದಲ್ಲಿ ಭಾನುವಾರ ನಡೆದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಕಾರ್ಯಕ್ರಮ ಹಾಗೂ ಧಾರ್ಮಿಕ ಸಭೆಯಲ್ಲಿ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಘದ ಜಿಲ್ಲಾ ನಿರ್ದೇಶಕ ಸಿ.ಎಸ್.ಪ್ರಶಾಂತ್ ಮಾತನಾಡಿದರು.
ತಂತ್ರಜ್ಞಾನ ವೇಗವಾಗಿ ಬೆಳೆದಂತೆ ಇಂದಿನ ಯುವ ಜನಾಂಗದಲ್ಲಿ ಧಾರ್ಮಿಕ ನಂಬಿಕೆಗಳು ಆಚರಣೆಗಳು ಕಡಿಮೆಯಾಗುತ್ತಿದೆ. ಮಕ್ಕಳಿಗೆ ಸಣ್ಣ ವಯಸ್ಸಿನಲ್ಲಿಯೇ ಸಂಸ್ಕಾರಯುತ ಜೀವನ ಮೌಲ್ಯಗಳ ಬಗ್ಗೆ ತಿಳುವಳಿಕೆ ನೀಡುವಲ್ಲಿ ಫೋಷಕರ ಪಾತ್ರ ಅತ್ಯಂತ ಮಹತ್ವವಾದದ್ದು ಎಂದು ಅವರು ತಿಳಿಸಿದರು.
ಮನುಷ್ಯ ಧರ್ಮದ ದಾರಿಯಲ್ಲಿ ನಡೆದಾಗ ಭಗವಂತನ ಅನುಗ್ರಹ ಪ್ರಾಪ್ತವಾಗುತ್ತದೆ. ಧರ್ಮಸ್ಥಳದ ಧರ್ಮಾಧಿಕಾರಿಗಳು ಪ್ರತಿ ಹಳ್ಳಿ ಹಳ್ಳಿಗಳಲ್ಲಿ ಇಂತಹ ಪೂಜಾ ಕಾರ್ಯಕ್ರಮಗಳನ್ನು ನಡೆಸಿ ಜನರಲ್ಲಿ ಧಾರ್ಮಿಕ ಜಾಗೃತಿಯನ್ನು ಮೂಡಿಸುತ್ತಿದ್ದು ಇವತ್ತಿನ ದಿನ ವಿದ್ಯಾಸಂಸ್ಥೆಯ ಆವರಣದಲ್ಲಿ ವಿದ್ಯಾರ್ಥಿಗಳು ಹಾಗೂ ಫೋಷಕರೊಂದಿಗೆ ಈ ಕಾರ್ಯಕ್ರಮ ನಡೆದಿರುವುದು ಅತ್ಯಂತ ಅರ್ಥಪೂರ್ಣವಾದದ್ದು ಎಂದರು.
ತಾಲ್ಲೂಕು ಪಂಚಾಯಿತಿ ಸದಸ್ಯ ಜೆ.ಎನ್.ನಾಗರಾಜು ಮಾತನಾಡಿ, ಧರ್ಮಸ್ಥಳದ ಧರ್ಮಾಧಿಕಾರಿಗಳ ಮಾರ್ಗದರ್ಶನದಲ್ಲಿ ಪ್ರತಿ ದಿನ ನೂರಾರು ಸಾಮಾಜಿಕ ಅರ್ಥಿಕ ಶೈಕ್ಷಣಿಕ ಹಾಗೂ ಧಾರ್ಮಿಕ ಕಾರ್ಯಕ್ರಮಗಳು ಹಳ್ಳಿ ಹಳ್ಳಿಗಳಲ್ಲಿ ನಡೆಯುತ್ತಿದೆ. ಇದರಿಂದ ಎಷ್ಟೋ ಕುಟುಂಬಗಳು ನೆರವನ್ನು ಪಡೆದುಕೊಂಡಿದೆ. ಈ ಸಂಸ್ಥೆ ಮಾಡುತ್ತಿರುವ ಪ್ರತಿಯೊಂದು ಕೆಲಸವೂ ಸಮಾಜಮುಖಿಯಾಗಿದೆ ಎಂದು ಹೇಳಿದರು.
ಗ್ರಾಮ ಪಂಚಾಯಿತಿ ಅಧ್ಯಕ್ಷ ಜೆ.ಆರ್.ಶ್ರೀನಿವಾಸ್ ಮಾತನಾಡಿ, ಧರ್ಮಸ್ಥಳ ಯೋಜನೆಯು ಗ್ರಾಮೀಣ ಪ್ರದೇಶದಲ್ಲಿ ಅರ್ಥಿಕ ಸ್ವಾವಲಂಬನೆಯ ಜೊತೆಗೆ ಜನರಲ್ಲಿ ಧಾರ್ಮಿಕ ಚಿಂತನೆ ಹಾಗೂ ಜಾಗೃತಿಯನ್ನು ಮೂಡಿಸುತ್ತಿದೆ. ಸಾಮೂಹಿಕ ಪೂಜೆ ಶ್ರೇಷ್ಠವಾದದ್ದು. ಮೊಬೈಲ್ ದಾಸರಾಗುತ್ತಿರುವ ಇಂದಿನ ಮಕ್ಕಳಿಗೆ ಇಂತಹ ಧಾರ್ಮಿಕ ಕಾರ್ಯಕ್ರಮಗಳ ಬಗ್ಗೆ ಅರಿವು ಮೂಡಿಸುವ ಅನಿವಾರ್ಯತೆ ಇವತ್ತಿನ ದಿನ ಖಂಡಿತವಾಗಲೂ ಇದೆ ಎಂದರು.
ಕರ್ನಾಟಕ ಗ್ರಾಮೀಣ ಬ್ಯಾಂಕ್ ಕೋಲಾರ್ ಶಾಖೆಯ ವ್ಯವಸ್ಥಾಪಕ ಪ್ರಕಾಶ್, ಶ್ರೀ ಜ್ಯೋತಿ ವಿದ್ಯಾಸಂಸ್ಥೆಯ ಅಧ್ಯಕ್ಷ ಗೋಪಾಲ್ ಆಚಾರ್, ಯೋಜನಾಧಿಕಾರಿ ಪ್ರಕಾಶ್ ಕುಮಾರ್, ಮುನಿರತ್ನಮ್ಮ, ಮೇಲ್ವಿಚಾರಕರಾದ ಚೇತನ್, ಬೋರಣ್ಣ, ದಿನೇಶ್, ವಲಯದ ಸೇವಾಪ್ರತಿನಿಧಿಗಳು, ಒಕ್ಕೂಟದ ಪದಾಧಿಕಾರಿಗಳು, ಶಿಕ್ಷಕರು ಹಾಜರಿದ್ದರು.