Sidlaghatta : ಮಕ್ಕಳ ಜೀವನದಲ್ಲಿ ಗುರುಗಳ ಸ್ಥಾನ ಅತ್ಯಂತ ಶ್ರೇಷ್ಠವಾಗಿದ್ದು, ಪೋಷಕರು ತಮ್ಮ ಮಕ್ಕಳಿಗೆ ಬಾಲ್ಯದಿಂದಲೇ ಗುರುಗಳನ್ನು ಗೌರವಿಸುವ ಸಂಸ್ಕಾರ ಬೆಳೆಸಬೇಕು ಎಂದು ಆದಿಚುಂಚನಗಿರಿ ಮಠದ ಚಿಕ್ಕಬಳ್ಳಾಪುರ ಶಾಖಾ ಮಠದ ಶ್ರೀ ಮಂಗಳಾನಂದ ಸ್ವಾಮೀಜಿ ಹೇಳಿದರು.
ನಗರದ ಹೊರವಲಯದ ಹನುಮಂತಪುರ ಗೇಟ್ ಬಳಿಯ ಬಿಜಿಎಸ್ ಶಾಲೆಯಲ್ಲಿ ಶುಕ್ರವಾರ ನಡೆದ “ಗುರುನಮನ-2026” ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಉತ್ತಮ ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರವೂ ಮಕ್ಕಳ ಭವಿಷ್ಯವನ್ನು ಉಜ್ವಲಗೊಳಿಸುತ್ತದೆ ಎಂದ ಸ್ವಾಮೀಜಿ, ವಿದ್ಯಾರ್ಥಿಗಳ ಉಜ್ವಲ ಭವಿಷ್ಯ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ಗುರುಗಳನ್ನು ಗೌರವಿಸುವ ಸಂಸ್ಕಾರವನ್ನು ಮಕ್ಕಳು ಬೆಳೆಸಿಕೊಳ್ಳಬೇಕು ಎಂದರು. ಪ್ರತಿಯೊಬ್ಬ ಪೋಷಕರೂ ಶಿಕ್ಷಕರೊಂದಿಗೆ ಉತ್ತಮ ಬಾಂಧವ್ಯ ಬೆಳೆಸಿಕೊಂಡಾಗ ಮಕ್ಕಳ ಉಜ್ವಲ ಭವಿಷ್ಯಕ್ಕೆ ಅದು ಸಹಕಾರಿಯಾಗುತ್ತದೆ ಎಂದು ಅಭಿಪ್ರಾಯಪಟ್ಟರು.
ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ನ ಆಡಳಿತಾಧಿಕಾರಿ ಎನ್. ಶಿವರಾಮರೆಡ್ಡಿ ಮಾತನಾಡಿ, ಶಿಕ್ಷಕರು ತಮ್ಮ ಸ್ವಂತ ಕುಟುಂಬ ಮತ್ತು ಮಕ್ಕಳ ಭವಿಷ್ಯಕ್ಕಿಂತಲೂ ಸಮಾಜದ ಮಕ್ಕಳ ಭವಿಷ್ಯ ರೂಪಿಸುವ ಮಹತ್ತರ ಜವಾಬ್ದಾರಿ ಹೊತ್ತು ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಬಣ್ಣಿಸಿದರು. ಇಂತಹ ಮಹಾನ್ ವ್ಯಕ್ತಿಗಳಾದ ಗುರುಗಳನ್ನು ಗೌರವಿಸುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಅವರು ತಿಳಿಸಿದರು.
ಕಾರ್ಯಕ್ರಮದಲ್ಲಿ 2025-26ನೇ ಸಾಲಿನ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಪೋಷಕರು ಶಿಕ್ಷಕರನ್ನು ಸನ್ಮಾನಿಸಿ ಗೌರವ ಸಲ್ಲಿಸಿದರು. ಪ್ರಾಂಶುಪಾಲ ಆರ್. ಮಹದೇವ್ ಸೇರಿದಂತೆ ಮಕ್ಕಳ ಪೋಷಕರು, ಶಿಕ್ಷಕರು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.
In English: Parents of 2025-26 SSLC students felicitated their teachers at a “Gurunamana-2026” program held at BGS School, Sidlaghatta. Sri Mangalananda Swamiji of Adichunchanagiri Math’s Chikkaballapur branch said parents should instill respect for teachers in children from a young age, calling good values as important as good education.
ಇಂತಹುದೇ ಗುರುವಂದನಾ ಕಾರ್ಯಕ್ರಮ ಇತ್ತೀಚೆಗೆ ಬಿ.ಎಂ.ವಿ ಶಾಲೆಯಲ್ಲಿ ನಡೆದಿತ್ತು.








