Sidlaghatta : ತಾಲ್ಲೂಕಿನ ಸುಗಟೂರು ರಸ್ತೆಯಲ್ಲಿರುವ ಬಾಲಾಜಿ ವಿದ್ಯಾನಿಕೇತನ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ತಾಲ್ಲೂಕು ಮಟ್ಟದ ಕ್ರೀಡಾಕೂಟದಲ್ಲಿ ಉತ್ತಮ ಸಾಧನೆ ಮಾಡಿ ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ಕ್ರೀಡಾಕೂಟದ ಥ್ರೋಬಾಲ್ ಸ್ಪರ್ಧೆಯಲ್ಲಿ ಶಾಲೆಯ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದ ಬಾಲಕ ಮತ್ತು ಬಾಲಕಿಯರ ನಾಲ್ಕು ತಂಡಗಳು ಭಾಗವಹಿಸಿದ್ದವು. ನಾಲ್ಕೂ ತಂಡಗಳು ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟದ ಸ್ಪರ್ಧೆಗೆ ಅರ್ಹತೆ ಪಡೆದಿವೆ. ಒಟ್ಟು 48 ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದರು.
ವಿಜೇತ ವಿದ್ಯಾರ್ಥಿಗಳನ್ನು ಶಾಲೆಯ ಆಡಳಿತ ಮಂಡಳಿ, ಮುಖ್ಯಶಿಕ್ಷಕರು ಹಾಗೂ ಶಿಕ್ಷಕರು ಅಭಿನಂದಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಆರ್. ಮುನಿರಾಜು, ವಿದ್ಯಾರ್ಥಿಗಳಲ್ಲಿ ಸಾಧಿಸುವ ಛಲ ಇರಬೇಕು. ಶಿಸ್ತು ಮತ್ತು ಏಕಾಗ್ರತೆಯಿಂದ ಸ್ಪರ್ಧೆಗಳಲ್ಲಿ ಪಾಲ್ಗೊಳ್ಳಬೇಕು. ಸೋಲು–ಗೆಲುವನ್ನು ಸಮಾನವಾಗಿ ಸ್ವೀಕರಿಸುವ ಮನೋಭಾವ ಬೆಳೆಸಿಕೊಳ್ಳಬೇಕು. ನಿರ್ದಿಷ್ಟ ಗುರಿ ಇಟ್ಟುಕೊಂಡು ಮುನ್ನಡೆದಾಗ ಮಾತ್ರ ಜೀವನದಲ್ಲಿ ಯಶಸ್ಸು ಸಾಧಿಸಲು ಸಾಧ್ಯ ಎಂದರು.
ಶಾಲೆಯ ವ್ಯವಸ್ಥಾಪಕ ನಿರ್ದೇಶಕಿ ವಂದನಾ, ನಿರ್ದೇಶಕ ಪ್ರಶಾಂತ್, ಮುಖ್ಯಶಿಕ್ಷಕಿ ಮಾಲಾ, ದೈಹಿಕ ಶಿಕ್ಷಕರಾದ ಪುಷ್ಪಾ, ಕಿರಣ್ ಹಾಗೂ ಶಿಕ್ಷಕರು ಇದ್ದರು.
In English: Four throwball teams from Balaji Vidyaniketan English Medium School on Sugatur Road, Sidlaghatta taluk, covering boys and girls in the primary and high school sections, won first place at the taluk-level sports meet and qualified for the district level. A total of 48 students took part. School management president R. Muniraju urged students to stay disciplined and accept victory and defeat equally.








