ಭಗೀರಥ ಜಯಂತ್ಯುತ್ಸವವನ್ನು ಅದ್ದೂರಿಯಾಗಿ ವರ್ಷಕ್ಕೊಮ್ಮೆ ಆಚರಿಸಿದರೆ ಸಾಲದು ಬದಲಿಗೆ ಅವರ ಆದರ್ಶಗಳನ್ನು ಪ್ರತಿಯೊಬ್ಬರೂ ರೂಡಿಸಿಕೊಳ್ಳುವುದರೊಂದಿಗೆ ಸಮಾಜದಲ್ಲಿ ಉತ್ತಮ ಬದುಕನ್ನು ರೂಪಿಸಿಕೊಳ್ಳಬೇಕು ಎಂದು ಶಾಸಕ ಎಂ.ರಾಜಣ್ಣ ಹೇಳಿದರು.
ನಗರದ ತಾಲ್ಲೂಕು ಕಛೇರಿ ಸಭಾಂಗಣದಲ್ಲಿ ಶುಕ್ರವಾರ ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಏರ್ಪಡಿಸಲಾಗಿದ್ದ ಭಗೀರಥ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವುದರ ಜೊತೆಗೆ ಸಮುದಾಯದ ಸಂಘಟನೆ ಮಾಡುವುದರೊಂದಿಗೆ ಸಮಾಜದ ಮುಖ್ಯವಾಹಿನಿಗೆ ಬರುವ ಪ್ರಯತ್ನ ಮುಖಂಡರು ಮಾಡಬೇಕು ಎಂದರು.
ಕಾರ್ಯಕ್ರಮದ ಮುಖ್ಯ ಭಾಷಣಕಾರರಾಗಿ ಆಗಮಿಸಿದ್ದ ಜಿ.ದ್ಯಾವಪ್ಪ ಮಾತನಾಡಿ, ಅಸಾಧ್ಯವಾದುದನ್ನು ತನ್ನ ಹಠದಿಂದ ಸಾಧಿಸಿ ಗಂಗೆಯನ್ನು ಭೂಮಿಗೆ ಕರೆತಂದ ಭಗೀರಥ ಮಹರ್ಷಿಯ ತತ್ವ, ಆದರ್ಶಗಳನ್ನು ಪ್ರತಿಯೊಬ್ಬರೂ ರೂಡಿಸಿಕೊಳ್ಳಬೇಕು ಎಂದರು.
ಶೈಕ್ಷಣಿಕವಾಗಿ ಹಾಗೂ ಸಾಮಾಜಿಕವಾಗಿ ಹಿಂದುಳಿದಿರುವ ಉಪ್ಪಾರರು ಭಗೀರಥರಂತೆ ಎಲ್ಲವನ್ನು ಸಾಧಿಸಿ ತೋರಿಸುವ ಮನೋಭಾವವನ್ನು ಬೆಳೆಸಿಕೊಳ್ಳಬೇಕು ಎಂದರು.
ಕಾರ್ಯಕ್ರಮದಲ್ಲಿ ಭಗೀರಥ ಮಹರ್ಷಿ ಭಾವಚಿತ್ರಕ್ಕೆ ಜನಾಂಗದ ಮುಖಂಡರೂ ಸೇರಿದಂತೆ ತಾಲ್ಲೂಕು ಆಡಳಿತದ ವತಿಯಿಂದ ಪೂಜೆ ಸಲ್ಲಿಸಲಾಯಿತು.
ತಹಶೀಲ್ದಾರ್ ಕೆ.ಎಂ.ಮನೋರಮಾ, ಗ್ರೇಡ್೨ ತಹಸೀಲ್ದಾರ್ ವಾಸುದೇವಮೂರ್ತಿ, ಸರ್ಕಾರಿ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ಎನ್.ಕೆ.ಗುರುರಾಜರಾವ್, ರಾಜಸ್ವ ನಿರೀಕ್ಷಕ ಸುಬ್ರಮಣಿ, ಭಗೀರಥ ಉಪ್ಪಾರ ಮಹಾಸಭಾ ತಾಲ್ಲೂಕು ಅಧ್ಯಕ್ಷ ಟಿ.ಗಂಗಪ್ಪ, ಖಜಾಂಚಿ ನರಸಿಂಹಪ್ಪ, ಸಮುದಾಯದ ಮುಖಂಡ ಕುಮಾರ ಮತ್ತಿತರರು ಹಾಜರಿದ್ದರು.
- Advertisement -
- Advertisement -
- Advertisement -