ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ನಗರದ ನೆಹರು ಕ್ರೀಡಾಂಗಣದಲ್ಲಿ ಡಿಸೆಂಬರ್ 29 ರ ಶುಕ್ರವಾರ ಮಧ್ಯಾಹ್ನ 2 ಗಂಟೆಗೆ ಐತಿಹಾಸಿಕ ಬೃಹತ್ ಕಾರ್ಯಕರ್ತರ ಸಮಾವೇಶವನ್ನು ಆಯೋಜಿಸಿರುವುದಾಗಿ ಕಾಂಗ್ರೆಸ್ ಮುಖಂಡ ವಿ.ಮುನಿಯಪ್ಪ ತಿಳಿಸಿದರು.
ನಗರದ ಕಾಂಗ್ರೆಸ್ ಭವನದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ರಾಜ್ಯ ಕಾಂಗ್ರೆಸ್ ಸರ್ಕಾರದ ಸಾಧನೆಗಳೇನು, ಜನಪರ ಕಾರ್ಯಕ್ರಮಗಳು ಏನೇನು ಎಂಬುದು ನಮ್ಮ ಕಾರ್ಯಕರ್ತರಿಗೆ ಸವಿಸ್ತಾರವಾಗಿ ತಿಳಿಸುವುದು. ಅವರ ಮೂಲಕ ಜನರಿಗೆ ಕಾಂಗ್ರೆಸ್ ಸರ್ಕಾರದ ವಿವಿಧ ಯೋಜನೆಗಳಿಂದ ಆಗಿರುವ ಅನುಕೂಲಗಳನ್ನು ಮನವರಿಕೆ ಮಾಡಿಕೊಡುವುದು ಈ ಸಮಾವೇಶದ ಮುಖ್ಯ ಉದ್ದೇಶವಾಗಿದೆ.
ಎಲ್ಲೆಡೆ ಚುನಾವಣೆಯ ಪ್ರಕ್ರಿಯೆಗಳು ಸಾಂಕೇತಿಕವಾಗಿ ಪ್ರಾರಂಭವಾಗಿವೆ. ಕಾಂಗ್ರೆಸ್ ಕಾರ್ಯಕರ್ತರನ್ನು ಎಚ್ಚರಿಸುವ, ಚುರುಕುಗೊಳಿಸುವ, ಮಾರ್ಗದರ್ಶನ ಮಾಡುವ, ಪಕ್ಷದ ಸಂದೇಶವಾಹಕರನ್ನಾಗಿಸುವ ಸಮಾವೇಶವಿದು. ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು ಆಗಮಿಸಲಿದ್ದು ಕಾರ್ಯಕರ್ತರಿಗೆ ಮಾರ್ಗದರ್ಶನ, ಚುನಾವಣಾ ಪೂರ್ವಸಿದ್ಧತೆಗಳ ಬಗ್ಗೆ ತಿಳಿಸಿಕೊಡಲಿದ್ದಾರೆ.
ಇತರ ರಾಜ್ಯಗಳಲ್ಲಿ ಇರದ ನಮ್ಮ ರಾಜ್ಯ ಸರ್ಕಾರ ರೂಪಿಸಿರುವ ವಿವಿಧ ಜನಪರ ಯೋಜನೆಗಳಾದ ಸನ್ನ ಭಾಗ್ಯ, ಕ್ಷೀರ ಭಾಗ್ಯ, ಕೃಷಿ ಭಾಗ್ಯ, ಬಯಲು ಸೀಮೆಗಾಗಿ 21 ಸಾವಿರ ಕೋಟಿ ರೂಗಳ ಎತ್ತಿನಹೊಳೆ ನೀರಾವರಿ ಯೋಜನೆ, 49 ಸಾವಿರ ಕೋಟಿ ರೂಗಳ ವಿವಿಧ ನೀರಾವರಿ ಯೋಜನೆಗಳ ಬಗ್ಗೆ ಜನರಿಗೆ ಕಾರ್ಯಕರ್ತರು ತಿಳಿಸಬೇಕು. ಈ ಎಲ್ಲಾ ಯೋಜನೆಗಳ ಫಲಾನುಭವಿಗಳು ಪಕ್ಷದ ಜನಪರ ಚಿಂತನೆಯ ಬಗ್ಗೆ ಅರಿತು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವಂತಾಗಲಿ ಎಂಬುದು ನಮ್ಮ ಆಶಯವಾಗಿದೆ ಎಂದು ಹೇಳಿದರು.
ಬೃಹತ್ ಕಾರ್ಯಕರ್ತರ ಸಮಾವೇಶವನ್ನು ಎ.ಐ.ಸಿ.ಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಉದ್ಘಾಟಿಸಲಿದ್ದಾರೆ, ಕೆ.ಪಿ.ಸಿ.ಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಅಧ್ಯಕ್ಷತೆ ವಹಿಸಲಿದ್ದಾರೆ, ಮುಖ್ಯ ಅತಿಥಿಗಳಾಗಿ ಕಾಂಗ್ರೆಸ್ ಮುಖಂಡರಾದ ಮಲ್ಲಿಕಾರ್ಜುನ ಖರ್ಗೆ, ಡಿ.ಕೆ.ಶಿವಕುಮಾರ್, ದಿನೇಶ್ ಗುಂಡೂರಾವ್, ಎಸ್.ಆರ್.ಪಾಟೀಲ್, ಆಸ್ಕರ್ ಫರ್ನಾಂಡಿಸ್, ಡಾ.ಎಂ.ವೀರಪ್ಪ ಮೊಯ್ಲಿ, ಬಿ.ಕೆ.ಹರಿಪ್ರಸಾದ್, ರೆಹಮಾನ್ ಖಾನ್, ಕೆ.ಎಚ್.ಮುನಿಯಪ್ಪ, ರಾಮಲಿಂಗಾರೆಡ್ಡಿ, ಕೆ.ಆರ್.ರಮೇಶ್ ಕುಮಾರ್, ಕೃಷ್ಣ ಬೈರೇಗೌಡ, ಎಚ್.ಎಂ.ರೇವಣ್ಣ, ನಸೀರ್ ಅಹ್ಮದ್ ಮತ್ತಿತರರು ಭಾಗವಹಿಸಲಿದ್ದಾರೆ ಎಂದರು.
ಬ್ಲಾಕ್ ಕಾಂಗ್ರೆಸ್ ಮಹಿಳಾ ವಿಭಾಗದ ಅಧ್ಯಕ್ಷೆ ಯಾಸ್ಮೀನ್ ತಾಜ್, ಮುಖಂಡರಾದ ಎನ್.ಮುನಿಯಪ್ಪ, ಸುಬ್ರಮಣಿ ಹಾಜರಿದ್ದರು.
- Advertisement -
- Advertisement -
For Daily Updates
WhatsApp 'HI' to 7406303366
- Advertisement -
- Advertisement -